ವಿಜಯನಗರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 2 ಮತ್ತು 4 ರಂದು ನಡೆಯಲಿರುವ ಭೂ ಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಪರೀಕ್ಷಾ ಅಕ್ರಮಗಳಿಗೆ ಆಸ್ಪದವಿಲ್ಲದಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಅಕ್ಟೋಬರ್ 2 ರಂದು ಭೂ ಮಾಪಕರ ಪರೀಕ್ಷೆ ನಡೆಯಲಿದ್ದು, ಹೊಸಪೇಟೆ ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,872 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೆಇಎ ಹೊಸ ಪ್ರಯೋಗವೊಂದನ್ನು ಜಾರಿಗೆ ತಂದಿದ್ದು, ಅಭ್ಯರ್ಥಿಯ ಹೆಸರು ಮತ್ತು ರೋಲ್ ಸಂಖ್ಯೆ ಮುಂಚಿತವಾಗಿಯೇ ಮುದ್ರಿಸಿರುವ ವೈಯಕ್ತಿಕರಿಸಿದ ಒಎಂಆರ್ ಶೀಟ್ ನೀಡಲಾಗುತ್ತದೆ. ಮತ್ತು ಅಕ್ಟೋಬರ್ 4 ರಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ನಡೆಯಲಿದ್ದು, ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಹರಪನಹಳ್ಳಿ ವ್ಯಾಪ್ತಿಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಈ ಪರೀಕ್ಷೆಗೆ ಒಟ್ಟು 10,923 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಮಾತ್ರ ಆಸನದ ವ್ಯವಸ್ಥೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಅಭ್ಯರ್ಥಿಗಳನ್ನು ನಿಖರ ತಪಾಸಣೆಗೆ ಒಳಪಡಿಸಲಾಗುತ್ತದೆ.
ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್ಗಳನ್ನು ಸುರಕ್ಷಿತವಾಗಿ ತಲುಪಿಸಲು ಮತ್ತು ಪರೀಕ್ಷೆ ಮುಗಿದ ತಕ್ಷಣ ಸುರಕ್ಷಿತವಾಗಿ ವಾಪಸ್ ತರಲು ಮಾರ್ಗ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಾಗೂ ವೀಕ್ಷಕರನ್ನು ನಿಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Leave a comment