ಆಳಂದ (ಕಡಗಂಚಿ): ಯೋಗವು ಕೇವಲ ದೈಹಿಕ ಕಸರತ್ತಲ್ಲ; ಅದು ನಮ್ಮ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಗಟ್ಟಿಗೊಳಿಸುವ ಅದ್ಭುತ ಶಕ್ತಿ ಎಂದು ಮುಖ್ಯ ಅತಿಥಿ ಫಾ. ವಿಲಿಯಂ ಮಿರಾಂದ ಹೇಳಿದರು. ಇಲ್ಲಿನ ಮೌಂಟ್ ಕಾರ್ಮೆಲ್ ಸಿಬಿಎಸ್‌ಇ ಶಾಲೆಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ಒತ್ತಡದ ಬದುಕಿನಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಶಿಸ್ತು ಬೆಳೆಸಿಕೊಳ್ಳಲು ಯೋಗ ಅತ್ಯಂತ ಸಹಕಾರಿ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನನಿತ್ಯದ ಜೀವನದಲ್ಲಿ ಯೋಗವನ್ನು ಒಂದು ಹವ್ಯಾಸವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ವ್ಯವಸ್ಥಾಪಕ ರೆ. ಫಾ. ಸಿಪ್ರಿಯನ್ ಫರ್ನಾಂಡಿಸ್ ಮಾತನಾಡಿ, ಆರೋಗ್ಯಕರ ಜೀವನಶೈಲಿಗೆ ಯೋಗವೇ ರಹದಾರಿ ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಕ ಶರಣಪ್ಪ ಹಾಗೂ ವಿದ್ಯಾರ್ಥಿಗಳು ಜಂಟಿಯಾಗಿ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ನಂತರ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ಯೋಗಾಭ್ಯಾಸ ಮಾಡಿದರು. ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲ ಫಾ. ಸಂದೀಪ್ ಗೋವಿಯಾಸ್ ಉಪಸ್ಥಿತರಿದ್ದರು. ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
Leave a comment