ವಿಜಯನಗರ : ನಗರದ ಪ್ರಮುಖ ರಸ್ತೆ, ಜಂಕ್ಷನ್ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಮಕ್ಕಳೊಂದಿಗೆ ಭಿಕ್ಷಾಟನೆ ಮಾಡುತ್ತಿರುವ ದೃಶ್ಯ ಕಂಡುಬರುತ್ತಿವೆ. ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಮತ್ತು ಅವರ ಕುಟುಂಬಸ್ಥರನ್ನು ತಕ್ಷಣವೇ ರಕ್ಷಿಸಿ, ನಿರಾಶ್ರಿತರ ಕೇಂದ್ರ ಹಾಗೂ ಬಾಲ ಮಂದಿರಗಳಿಗೆ ಸೇರಿಸಬೇಕು ಎಂದು ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ದ್ವೈ ಮಾಸಿಕ ಸಭೆಯಲ್ಲಿ ಭಾಗವಹಿಸಿ
ಅವರು ಮಾತನಾಡಿದರು. ಸಾರ್ವನಿಕ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ಕುರಿತು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಜಂಟಿ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ತಕ್ಷಣ ರಕ್ಷಿಸಬೇಕು. ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಕರೆ ಮಾಡಿ ಮಾಹಿತಿ ನೀಡಬಹುದು.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಇತ್ತೀಚೆಗೆ ಬಾಲ್ಯ ವಿವಾಹಗಳು ಹಾಗೂ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳು ಜಂಟಿಯಾಗಿ ಸಮನ್ವಯತೆ ಸಾಧಿಸಿ ಬಾಲ್ಯ ವಿವಾಹಗಳನ್ನು ತಡೆಗೆ ಕ್ರಮವಹಿಸಬೇಕು.
ಅದಲ್ಲದೇ ಶಾಲಾ-ಕಾಲೇಜುಗಳು, ಕಲ್ಯಾಣ ಮಂಟಪಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಪೋಕ್ಸೋ ಕಾಯ್ದೆಯ ಕಠಿಣ ನಿಯಮಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತನ್ನ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಮಾಹಿತಿ ಇದೆ.
ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಮನೆ-ಮನೆ ಸಮೀಕ್ಷೆ ನಡೆಸಿ, ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಾರ್ವಜನಿಕರಿಂದ ಕಂದಾಯ ಇಲಾಖೆಯ ವಿರುದ್ಧ ದೂರು ಕೇಳಿಬರುತ್ತಿವೆ. ಅದರಲ್ಲೂ ಜಮೀನು ಸರ್ವೇ, ಹದ್ದುಬಸ್ತು ಮತ್ತು ಪೋಡಿ ವಿಳಂಬದ ದೂರುಗಳ ಬಗ್ಗೆ ವ್ಯಾಪಕ ದೂರುಗಳು
ಕೇಳಿಬರುತ್ತಿವೆ.
ಜಮೀನು ಸರ್ವೇ, ಹದ್ದುಬಸ್ತು ಮತ್ತು ಪೋಡಿ ಪ್ರಕರಣಗಳ ವಿಳಂಬದ ಕುರಿತು ಸಾರ್ವಜನಿಕರನ್ನು ಅಲೆದಾಡಿಸದೆ, ನ್ಯಾಯಾಲಯಗಳಲ್ಲಿ ಭೂ ವಿವಾದಗಳಿಗೆ ಸಂಭಂದಿಸಿದ ಪ್ರಕರಣಗಳು ಹೆಚ್ಚಾಗದಂತೆ ತಡೆಯಲು, ಕಂದಾಯ ಅಧಿಕಾರಿಗಳು ತಳಮಟ್ಟದಲ್ಲೇ ಸರ್ವೇ ಮತ್ತು ಹದ್ದುಬಸ್ತು ಕಾರ್ಯಗಳನ್ನು ತ್ವರಿತವಾಗಿ ಮುಗಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ನಿರ್ದೇಶಿಸಿದರು.
ಜುಲೈ 11 ರಂದು ‘ರಾಷ್ಟ್ರೀಯ ಲೋಕ ಅದಾಲತ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಲೋಕ ಅದಾಲತ್‌ನಲ್ಲಿ ಜಿಲ್ಲಾದ್ಯಂತ 4,000ಕ್ಕೂ ಅಧಿಕ ಸಿವಿಲ್, ಕ್ರಿಮಿನಲ್ ಹಾಗೂ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಇತ್ಯಾರ್ಥಪಡಿಸುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಮತ್ತು ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶೃತಿ ತೇಲಿ, 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶರದಿ ರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ವೈ ಕಾಳೆ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುಜ್ಜಲ ನಾಗರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Leave a comment