Home ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ
Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

Share
Share

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ವಕೀಲರ ಸಂಘ, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಕ್ಕಳಿಗೆ ನ್ಯಾಯಯುತ ಬಾಲ್ಯ, ವಯಸ್ಕರಿಗೆ ಘನತೆಯ ಉದ್ಯೋಗ ಎಂಬ ಘೋಷವಾಕ್ಯದೊಂದಿಗೆ ಇದೇ ಜೂನ್ 12 ರಂದು ಬೆಳಗ್ಗೆ 11 ಗಂಟೆಗೆ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತರ್, ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಐ. ಡೊಂಬರಮತ್ತೂರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ
ನಿರ್ದೇಶಕ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ್, ಕಾರ್ಯದರ್ಶಿ ಕೃಷ್ಣದೇವರಾಯಲು ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಕೀಲ ಎ.ಕರುಣಾನಿಧಿ ಭಾಗವಹಿಸಲಿದ್ದಾರೆ.

ಬಾಲಕಾರ್ಮಿಕ ಪದ್ದತಿ ವಿರೋಧಿಸಿ ಜಾಗೃತಿ ಜಾಥಾ: ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಬೆಳಗ್ಗೆ 9.30 ಕ್ಕೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜಶೇಖರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಅವರು ಬಾಲಕಾರ್ಮಿಕ ಪದ್ದತಿ ವಿರೋಧಿಸಿ ಜಾಗೃತಿ ಜಾಥಕ್ಕೆ ಚಾಲನೆ ನೀಡಲಿದ್ದಾರೆ. ಜಾಗೃತಿ ಜಾಥವು ಅಂಬೇಡ್ಕರ್ ವೃತ್ತದಿಂದ ಆರಂಭವಾಗಿ ಪುನೀತ್ರಾ ಜ್‌ಕುಮಾರ್ ವೃತ್ತ, ಮೂರಂಗಡಿ ಸರ್ಕಲ್, ಜಿಲ್ಲಾ ಆಸ್ಪತ್ರೆ, ನಗರಸಭೆ, ಸಾವಿಗಿ ಮಾರುಕಟ್ಟೆ ಮುಖಾಂತರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ : ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ : ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ ವಿಜಯನಗರ (ಹೊಸಪೇಟೆ)(ಕರ್ನಾಟಕ ವಾರ್ತೆ) ಜೂನ್.11: ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯುವುದರ ಜತೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯ ಅನುಷ್ಠಾನ ಹಾಗೂ ಫಲಾನುಭವಿಗಳ ಆಯ್ಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯ ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಅಧಿಕಾರಿಗಳು ಯಾವುದೇ ವಿಳಂಬ ಮಾಡದೇ ಅರ್ಹ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟಿನ್ ವಾಹನಗಳ ಸೌಲಭ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು. ವಿಶ್ವವಿಖ್ಯಾತ ಹಂಪಿ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ದಿಗೆ ಪೂರಕವಾಗಿ ಯೋಜನೆ ಅನುಷ್ಠಾನವಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಆರ್ಥಿಕ ಸಬಲೀಕರಣಕ್ಕಾಗಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ  ‘ಮೊಬೈಲ್ ಕ್ಯಾಂಟೀನ್’ ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಬೇಕು ಎಂದು ಹೇಳಿದರು

ಹಂಪಿ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಅಥವಾ ಜಿಲ್ಲೆಗೆ ಬರುವ ದೇಶ-ವಿದೇಶಿ ಪ್ರವಾಸಿಗರ ಗಮನದಲ್ಲಿಟ್ಟುಕೊಂಡು, ವಿಶ್ವ ಪಾರಂಪರಿಕ ತಾಣ ಹಂಪಿ, ಕಮಲಾಪುರ, ಹೊಸಪೇಟೆ ನಗರದ ಪ್ರಮುಖ ವೃತ್ತಗಳು ಹಾಗೂ ಪ್ರವಾಸಿಗರು ಹೆಚ್ಚಾಗಿ ಸಂಚರಿಸುವ ಹೆದ್ದಾರಿಯ ಆಯಕಟ್ಟಿನ ಜಾಗಗಳಲ್ಲಿ ಈ ಸಂಚಾರಿ ಕ್ಯಾಂಟೀನ್ ನಡೆಸಲು ಅವಕಾಶ ಕಲ್ಪಿಸಿ ಕೊಡಬೇಕು. ಇಲಾಖೆಯಿಂದ ಸಿಗುವ ಗರಿಷ್ಠ ಸಹಾಯಧನ ಮೊತ್ತ ಹಾಗೂ ಬ್ಯಾಂಕ್‌ಗಳ ಮೂಲಕ ಒದಗಿಸಲಾಗುವ ಸಾಲ ಸೌಲಭ್ಯ ಸಕಾಲಕ್ಕೆ ಸಿಗುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸುವ ಮೂಲಕ ಕಾರ್ಯನಿರ್ವಹಿಸಬೇಕು ಎಂದರು.

ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಮೊಬೈಲ್ ಕ್ಯಾಂಟೀನ್ ವಿತರಿಸುವುದಷ್ಟೇ ಮುಖ್ಯವಲ್ಲ, ಪ್ರವಾಸಿ ತಾಣಗಳ ಸ್ವಚ್ಛತೆ ಕಾಪಾಡುವುದು ಅಷ್ಟೇ ಮುಖ್ಯ ಎಂದು ಹೇಳಿದರು. ಕ್ಯಾಂಟೀನ್‌ಗಳಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ: ಕಸ ವಿಲೇವಾರಿಗೆ ಜೈವಿಕವಾಗಿ ಕೊಳೆಯುವ ವಸ್ತುಗಳ ಬಳಸಬೇಕು ಮತ್ತು ತ್ಯಾಜ್ಯ ವಿಲೇವಾರಿಗೆ ಕಸದ ಡಬ್ಬಿ ಬಳಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಹಂಪಿಯ ರಕ್ಷಿತ ಮತ್ತು ಬಫರ್ ವಲಯದ ಐತಿಹಾಸಿಕ ಸ್ಮಾರಕಗಳ ಸೌಂದರ್ಯಕ್ಕೆ ಧಕ್ಕೆ ಬಾರದಂತೆ ನಿಯಮ ಪಾಲಿನೆ ಮಾಡಬೇಕು ಎಂದು ಅವರು ಎಚ್ಚರಿಸಿದರು.

ಈ ಯೋಜನೆಯ ಮೂಲಕ ಪ್ರವಾಸಿಗರಿಗೆ ಶುಚಿ-ರುಚಿಯಾದ ಸ್ಥಳೀಯ ಮತ್ತು ಸಾಂಪ್ರದಾಯಿಕ ಆಹಾರ
ಪದಾರ್ಥಗಳು ಕೈಗೆಟುಕುವ ದರದಲ್ಲಿ ಸಿಗುವಂತಾಗಬೇಕು. ಇದು ಕೇವಲ ಒಂದು ಸಮುದಾಯದ  ಆರ್ಥಿಕ ಪ್ರಗತಿಯಷ್ಟೇ ಅಲ್ಲದೆ, ಜಿಲ್ಲೆಯ ಪ್ರವಾಸೋದ್ಯಮ ಮೂಲಸೌಕರ್ಯ ವೃದ್ಧಿಗೂ ಪೂರಕವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಈ ವೇಳೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಪ್ರಭುಲಿಂಗ ತಳಕೇರಿ ಮಾತನಾಡಿ, 2024-25ನೇ ಸಾಲಿಗೆ ಈ ಯೋಜನೆಯಡಿ, ಪರಿಶಿಷ್ಟ ಜಾತಿಗೆ 6 ಮತ್ತು ಪರಿಶಿಷ್ಟ ಪಂಗಡಕ್ಕೆ
4 ಸೇರಿ ಒಟ್ಟು 10 ಜನ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಲಾಗಿದೆ. ಈ ಪೈಕಿ 4  ಫಲಾನುಭವಿಗಳ ಅರ್ಜಿ ಅನುಮೋದನೆಗೊಂಡು ಸಹಾಯಧನ ಮಂಜೂರು ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲೇ ವಾಹನ ವಿತರಣೆ ಮಾಡಲಾಗುವುದು. ಉಳಿದ 6 ಫಲಾನುಭವಿಗಳ ಆಯ್ಕೆಗಾಗಿ ಮುಂದಿನ ದಿನಗಳಲ್ಲಿ ಅರ್ಜಿ ಆಹ್ವಾನಿಸಲಾಗುವುದು.

2025-26ನೇ ಸಾಲಿಗಾಗಿ ಪರಿಶಿಷ್ಟ ಜಾತಿಗೆ 6 ಮತ್ತು ಪರಿಶಿಷ್ಟ ಪಂಗಡಗಕ್ಕೆ 4 ಸೇರಿ ಒಟ್ಟು 10 ಜನ ಫಲಾನುಭವಿಗಳನ್ನು ಆಯ್ಕೆ ಮಾಡಲು ಗುರಿ ನಿಗದಿಪಡಿಸಲಾಗಿದೆ. ಅದಕ್ಕಾಗಿ ಪರಿಶಿಷ್ಟ ಜಾತಿ ಸಮುದಾಯದಿಂದ 25 ಹಾಗೂ ಪರಿಶಿಷ್ಟ ಪಂಗಡ ಫಲಾನುಭವಿಗಳಿಂದ 4 ಸೇರಿ ಒಟ್ಟು 29 ಅಭ್ಯರ್ಥಿಗಳಿಂದ ಅರ್ಜಿ ಸ್ವೀಕೃತವಾಗಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿ ಹಾಗೂ ಫಲಾನುಭವಿಗಳ ವಯಸ್ಸು ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕ ಮತ್ತು ವಯೋಮಿತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಜೂನ್ 28ಕ್ಕೆ ಮುಂದೂಡಿಕೆ

ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ...

Homeಕೃಷಿ

ಕೃಷಿ ಕಾರ್ಮಿಕರ ಕೊರತೆಗೆ ಮುಕ್ತಿ: 

ಹರಪನಹಳ್ಳಿ: ಗ್ರಾಮೀಣ ಭಾಗದ ರೈತರು ವರ್ಷಗಳಿಂದ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾದ 'ಸಕಾಲಕ್ಕೆ ಕೃಷಿ ಕಾರ್ಮಿಕರು ಸಿಗದಿರುವ'...

Homeಶಿಕ್ಷಣ

 ಹಗರಿ ಗಜಾಪುರ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ

ಹರಪನಹಳ್ಳಿ : ಬಾಲ ಕಾರ್ಮಿಕ ಪದ್ಧತಿಯು ಸಮಾಜದ ದೊಡ್ಡ ಪಿಡುಗಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ...

Homeಶಿಕ್ಷಣ

ಅನಂತನಹಳ್ಳಿ : ಕಾಲೇಜುಗಳಿಗೆ ಪ್ರತ್ಯೇಕ ಸಾರಿಗೆ ಬಸ್‍ ಗೆ ಆಗ್ರಹ

ಹರಪನಹಳ್ಳಿ : ತಾಲೂಕಿನ ಅನಂತನಹಳ್ಳಿಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.